ಮಂಗಳೂರು,ಜು.04 :ದಕ್ಷಿಣ ಕನ್ನಡ ಜಿಲ್ಲೆಯಲ್ಲಿನಿರೀಕ್ಷೆಗೂ ಮೀರಿ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರವೂ ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದ್ದು ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರ್ಕಾರವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವಾರು ಮನೆಗಳು ಕುಸಿದಿದ್ದು, ಮನೆಗಳ ಮೇಲೆ ಬೃಹತ್ ಮರ ಉರುಳಿದ್ದು, ಮನೆಯೊಳಗೆ ಪ್ರವಾಹದ ನೀರು ನುಗ್ಗಿದ್ದು, ಗುಡ್ಡ ಕುಸಿತ, ರಸ್ತೆ, ಚರಂಡಿ, ತಡೆಗೋಡೆ, ರಾಜ ಕಾಲುವೆಗಳಿಗೆ ಹಾನಿ, ಹೀಗೆ ಹತ್ತು ಹಲವು ರೀತಿಯಲ್ಲಿ ಜನಸಾಮಾನ್ಯರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೊಳಗಾಗಿ ಮೇಲ್ನೋಟಕ್ಕೆ ಸುಮಾರು 300 ಕೋಟಿಗೂ ಅಧಿಕ ನಷ್ಟವಾಗಿದ್ದು ಕಂಡು ಬರುತ್ತಿದೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿಗಳು ನಿನ್ನೆಯಷ್ಟೇ, ಇಂತಹ ದುರಂತದಲ್ಲಿ ಪೂರ್ಣ ಮನೆ ಹಾನಿಯಾಗಿದ್ದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮದ ಪ್ರಕಾರ 1.20 ಲಕ್ಷ ಮಾತ್ರ, ಭಾಗಶಃ ಮನೆ ಹಾನಿಗೆ 50,000 ಮಾತ್ರ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಮನೆಯೊಳಗೆ ಪ್ರವಾಹದ ನೀರು ನುಗ್ಗಿದರೆ ಯಾವುದೇ ಪರಿಹಾರದ ಬಗ್ಗೆ ಉಲ್ಲೇಖಿಸಿಲ್ಲ. ಉಸ್ತುವಾರಿ ಮಂತ್ರಿಗಳು ಹೆಚ್ಚಿನ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ ಎಂದರು.