ಬೆಂಗಳೂರು, ಆ. 14 : ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಮಾಡಲಾಗಿದೆ. ಪುಷ್ಪಾ ಅಮರನಾಥ್ ಹಾಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದರು. ಇದೀಗ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಸೌಮ್ಯ ರೆಡ್ಡಿ ಅವರು 2018 ರಲ್ಲಿ ಜಯನಗರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದಾಗ್ಯೂ, ಅವರು ಮೇ 2023 ರಲ್ಲಿ ಕರ್ನಾಟಕದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ ಸೋತರು. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ಸೋತಿದ್ದರು.
ಸೌಮ್ಯ ರೆಡ್ಡಿ ಅವರನ್ನು ಹೊಸ ಮಹಿಳಾ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸುವುದರಿಂದ ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯವಾಗಲಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಅವರ ಹೆಸರನ್ನು ಶಿಫಾರಸು ಮಾಡಿದೆ.