ನವದೆಹಲಿ,ಮೇ.07 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿ ನಡೆಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಹಿರಂಗಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು. ಪಾಕಿಸ್ತಾನದಲ್ಲಿ ನಾಗರಿಕರ ಸಾವುನೋವುಗಳ ವರದಿಗಳಿಲ್ಲ ಎಂದರು.
ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 70 ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.