ಶ್ರೀನಗರ, ಜ. 22 : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸೇನೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.











