ಕರ್ನೂಲು, ಜು. 21 :ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಜನರಲ್ ಮ್ಯಾನೇಜರ್ ರವಿ ಶೆಟ್ಟಿ (43) ಸಾವನ್ನಪ್ಪಿದ್ದಾರೆ.
ರವಿಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ರಾತ್ರಿ ಸುಮಾರು 2.30 ಗಂಟೆಗೆ ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಜನರಲ್ ಮ್ಯಾನೇಜರ್ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.











