ಮಂಗಳೂರು, ಜು. 31 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸ ಲಾಗುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ -2026 ಉದ್ಯೋಗ ಮೇಳ ಆ. 7 ಮತ್ತು 8ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐಎಸ್, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಉತ್ಪಾದನಾ ವಲಯ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ ಸೇರಿದಂತೆ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.
ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗಾಗಿ ಆ.6ರಿಂದ ಉಚಿತ ವಸತಿ ವ್ಯವಸ್ಥೆ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಪು, ಕುಂದಾಪುರ , ಬಂಟ್ವಾಳ,ಉಪ್ಪಳ , ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ (http://www.alvaspragati.com)** ವೆಬ್ಸೈಟ್ ಅಥವಾ ಮೊಬೈಲ್ ಸಂಖ್ಯೆ 9611750531 / 9741440490 ಸಂಪರ್ಕಿಸಬಹುದು ಎಂದು ತಿಳಿಸಿದರು.











