ಬಂಟ್ವಾಳ, ಸೆ.01:ಆಟೋ ರಿಕ್ಷಾಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ರಶೀಕ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಸಜಿಪಮೂಡ ಕಡೆಗೆ ಪ್ರಯಾಣಿಸುತ್ತಿದ್ದಾಗ ಪೆಲತ್ತಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರಾತ್ರಿ ಸುಮಾರು 8 ಗಂಟೆಗೆ ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ ಬರುತ್ತಿದ್ದ ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ರಶೀಕ್ ಅವರನ್ನು ಸ್ಥಳೀಯರು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬಂಟ್ವಾಳ ಸಂಚಾರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝಾನುಲ್ ಅಬಿದೀನ್ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











