ಮಂಗಳೂರು: ಅ.10 :: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ವಿರಾಸತ್ ಹಾಗೂ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಜ.6ರಿಂದ 10ರವರೆಗೆ ಐದು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಆಳ್ವಾಸ್ ವಿರಾಸತ್ ಹಾಗೂ ನುಡಿಸಿರಿ ಕಾರ್ಯಕ್ರಮವು ಜ.7,2027 ರ ಗುರುವಾರ ಬೆಳಗ್ಗೆ ಉದ್ಘಾಟನೆಗೊಂಡು ಜ.9ರ (3 ದಿನಗಳು) ಶನಿವಾರ ಸಂಜೆ ಸಮಾಪನಗೊಳ್ಳಲಿದೆ. ಆಳ್ವಾಸ್ ನುಡಿಸಿರಿ-2026ರ ಸರ್ವಾಧ್ಯಕ್ಷರಾಗಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಹಾಗೂ ಉದ್ಘಾಟಕರಾಗಿ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಆಗಮಿಸಲಿದ್ದಾರೆ ಎಂದರು.
ಆಳ್ವಾಸ್ ವಿರಾಸತ್ 2027ರ ಉದ್ಘಾಟನಾ ಸಮಾರಂಭ ಜನವರಿ 6ರಂದು ಸಂಜೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಶಾಸ್ತ್ರೀಯ ಹಾಗೂ ಜನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಇಬ್ಬರು ಸಾಧಕರಿಗೆ ‘ಆಳ್ವಾಸ್ ವಿರಾಸತ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು .
ಆಳ್ವಾಸ್ ನುಡಿಸಿರಿ–ವಿರಾಸತ್ 2027ರ ಅಂಗವಾಗಿ ಜನವರಿ 6 ಮತ್ತು 7ರಂದು ‘ಹಸಿರು ಸಂವಾದ’ ರಾಷ್ಟ್ರೀಯ ಮಟ್ಟದ ಸಮ್ಮೇಳನ ನಡೆಯಲಿದೆ. ಕರಾವಳಿ ಪರಿಸರ ಸಂರಕ್ಷಣೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಹಾಗೂ ಸಮುದಾಯದ ಸಹಭಾಗಿತ್ವದ ಮೂಲಕ ಸುಸ್ಥಿರ ಪರಿಸರ ವ್ಯವಸ್ಥೆ ರೂಪಿಸುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮದಲ್ಲಿ 800ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದರು.
ರಾಜ್ಯಮಟ್ಟದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಾಂಸ್ಕೃತಿಕ ಜಂಬೂರಿ ಆಳ್ವಾಸ್ ನುಡಿಸಿರಿ–ವಿರಾಸತ್ 2027ರ ಅಂಗವಾಗಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯಮಟ್ಟದ ಸಾಂಸ್ಕೃತಿಕ ಜಂಬೂರಿ ಆಯೋಜಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 5,000ಕ್ಕೂ ಅಧಿಕ ಸ್ಕೌಟ್ಸ್, ಗೈಡ್ರೋವರ್ಸ್ ಹಾಗೂ ರೇಂಜರ್ಸ್ಗಳು ಜಂಬೂರಿಯಲ್ಲಿ ಭಾಗವಹಿಸಲಿದ್ದಾರೆ.ಜಂಬೂರಿಯಲ್ಲಿ ವಿವಿಧ ತರಬೇತಿ ಹಾಗೂ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ದೇಶೀಯ ಕಲೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 800 ವಿದ್ಯಾರ್ಥಿ ಕಲಾವಿದರಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಶಾಸ್ತ್ರೀಯ ನೃತ್ಯ, ಸಂಗೀತ, ಪಕ್ಕವಾದ್ಯ ಹಾಗೂ ಏಕವ್ಯಕ್ತಿ ಪ್ರದರ್ಶನ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಪರಿಣತಿ ಹೊಂದಿರುವ ಕಲಾವಿದರು ಇದರಲ್ಲಿ ಭಾಗವಹಿಸಬಹುದಾಗಿದೆ ಎಂದರು.
ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಜ.8ರಂದು ‘ಆಳ್ವಾಸ್ ವಿದ್ಯಾರ್ಥಿಸಿರಿ’ ಒಂದು ದಿನದ ಸಮ್ಮೇಳನ ನಡೆಯಲಿದೆ. ವಿದ್ಯಾರ್ಥಿಗಳ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ವೇದಿಕೆ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.
ನುಡಿಸಿರಿ–ವಿರಾಸತ್‌ನ ವಿಶೇಷ ಆಕರ್ಷಣೆಯಾಗಿ ಕೃಷಿಮೇಳ, ವಿಜ್ಞಾನ ಮೇಳ, ಆಹಾರ ಮೇಳ, ಪುಸ್ತಕ ಮೇಳ ಹಾಗೂ ಕಲಾ ಮೇಳಗಳು ನಡೆಯಲಿವೆ.. ಆಳ್ವಾಸ್ ನುಡಿಸಿರಿ–ವಿರಾಸತ್ 2027ರಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲು ಇಚ್ಛಿಸುವವರು ಐದು ದಿನಗಳಿಗಾಗಿ ರೂ.500 ಪ್ರತಿನಿಧಿ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು. ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಜ್ಞಾನಪರ ಕಾರ್ಯಕ್ರಮಗಳ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಭಾಗವಹಿಸುವಂತೆ ಅವರು ಮನವಿ ಮಾಡಿದರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇದರ ನುಡಿಸಿರಿ-ವಿರಾಸತ್ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.











