ತುಮಕೂರು: ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವ ಹಕ್ಕು ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 2 ದಿನಗಳಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ 15 ರಿಂದ 20 ವಿದ್ಯಾರ್ಥಿಗಳ ವಿರುದ್ಧ ತುಮಕೂರಿನ ಎಂಪ್ರೆಸ್ ಕಾಲೇಜಿನ ಪ್ರಾಂಶುಪಾಲರು ತುಮಕೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ, ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹಿಜಾಬ್ ಪ್ರತಿಭಟನೆ ಸಂಬಂಧ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ದಾಖಲಾಗಿದೆ. ಹಿಜಾಬ್ ಸಂಬಂಧ ರಾಜ್ಯದೆಲ್ಲೆಡೆ ಪ್ರತಿಭಟನೆ ಮುಂದುವರೆದಿದೆ. ಅನೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಇಲ್ಲದಿದ್ದರೆ ತರಗತಿಗೆ ಹಾಜರಾಗುವುದಿಲ್ಲಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಹಿಜಾಬ್ ಜತೆಗೆ ಪ್ರವೇಶಕ್ಕೆ ಶಾಲಾ-ಕಾಲೇಜುಗಳು ನಿರಾಕರಿಸುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ. ಇನ್ನು ವಿದ್ಯಾರ್ಥಿಗಳ ಪ್ರತಿಭಟನೆಗೆ ಅನೇಕ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿವೆ.
ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ, ಮೈಸೂರು, ಮಂಡ್ಯ, ಉಡುಪಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.