ಮಂಗಳೂರು, ಜ.18: ನಗರದ ಮೇರಿ ಹಿಲ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನೆರವೇರಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದೆ. ಸರಕಾರದ ಎಲ್ಲಾ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕಾಗಿರುವುದು ಅಂತಿಮ ಗುರಿಯಾಗಿದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂತಹ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂತೆ ರೂಪುಗೊಳ್ಳಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಆರ್ ಜಿಯು ಎಚ್ ಎಸ್ನ ಸಹ ಕುಲಪತಿ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಮಾತನಾಡಿ,ದೇಶದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅತ್ಯಂತ ಹೆಚ್ಚು ವೈದ್ಯಕೀಯ ಕಾಲೇಜು ಹೊಂದಿದೆ. ಸರಕಾರ ಬಡವರಿಗೆ ಕನಿಷ್ಠ ದರದಲ್ಲಿ ಚಿಕಿತ್ಸೆ ನೀಡುವ ಗುರಿ ಹೊಂದಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಗೆ ಎರಡು ಲಕ್ಷ ಸದಸ್ಯರು ನೋಂದಣಿಯಾಗಿದ್ದಾರೆ ಅವರ ಕೌಶಲ್ಯ ವೃದ್ಧಿಗೆ ಸಹಾಯವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಅಶೋಕ್ ಕುಮಾರ್ ರೈ ಐವನ್ ಡಿಸೋಜ, ಡಾ.ಮಂಜುನಾಥ ಭಂಡಾರಿ, ಗೋವಿಂದರಾಜು, ಮನಪಾ ಮೇಯರ್ ಮನೋಜ್ ಕುಮಾರ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್, ಸರಕಾರದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಟ್ಸನ್, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ತ್ರಿವೇಣಿ, ಆರ್ಜಿ ಯುಎಚ್ ಎಸ್ ಸೆನೆಟ್ ಸದಸ್ಯರಾದ, ಡಾ.ಶಿವಶ ರಣ್ ಶೆಟ್ಟಿ, ಡಾ.ಮುಹಮ್ಮದ್ ಸುಹೇಲ್ ಮೊದಲಾದವರು ಉಪಸ್ಥಿತರಿದ್ದರು.