ಮಂಗಳೂರು, ಮೇ. 27 : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬತನ ಹತ್ಯೆಯ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಯವರು ಮೇ 27 ರಂದು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮೇ 27 ರಂದು ಸಂಜೆ 6.00 ಗಂಟೆಯಿಂದ ಮೇ 30 ರಂದು ಸಂಜೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.