ಬೆಂಗಳೂರು, ಜೂ. 04 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತದ ಕುರಿತು ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತಾಡಿ, ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು .ಸರ್ಕಾರ ಇದಕ್ಕೆ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.
ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಇದನ್ನು ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ ಎಂದರು.
ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.