ಮಂಗಳೂರು, ನ. 01 : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ 70ನೇ ಕನ್ನಡ ರಾಜ್ಯೋತ್ಸವ ವನ್ನು ನವೆಂಬರ್ 1, ಶನಿವಾರ ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿ ದರು.
ಬಳಿಕ ಮಾತನಾಡಿದ ಅವರು, ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರಾಗಲಿ, ಕರ್ನಾಟಕದಲ್ಲಿ ಇರುವವರೆಲ್ಲರೂ ಕನ್ನಡಿಗರೇ ಆಗಿರುತ್ತಾರೆ.ಕನ್ನಡಿಗರಿಗೆ ಕನ್ನಡ ಭಾಷೆ ಮೇಲೆ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು.
ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಲಪಾಡಿಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ ಎಂದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳು ಸೇರಿ 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ದ. ಕ. ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ವಿವಿಧ ಅಕಾಡೆಮಿ, ನಿಗಮ ಮಂಡಳಿ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











