ಮಂಗಳೂರು, ಫೆ.24: ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಸಹಕಾರಿ ರಂಗದಲ್ಲಿ ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಡಿರುವ ಸಾಧನೆ ಶ್ಲಾಘನೀಯವಾದುದು ಎಂದರು.
ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಡಾ। ಎಂ. ವೀರಪ್ಪ ಮೊಯಿಲಿ ಅವರು ಮಾತಾಡಿ, 64 ಕೋಟಿ ರೂ ಠೇವಣಿಯಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಈಗ 7,000 ಕೋಟಿ ರೂ.ಗೂ ಅಧಿಕ ಠೇವಣಿ ಸಂಗ್ರಹ ಮಾಡಲು ಸಾಧ್ಯವಾಗಿದೆ. ಬ್ಯಾಂಕ್ 25 ಶಾಖೆಗಳಿಂದ 113 ಶಾಖೆಗಳಿಗೆ ಏರಿಕೆ ಯಾಗಿದೆ.ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಎಂದು ಹೇಳಿದರು.
ಅಭಿವಂದನೆ ಸ್ವೀಕರಿಸಿ ಮಾತಾಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ಇಂದು ನಿಮ್ಮೆಲ್ಲರ ಸಹಕಾರದಿಂದ ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿ ಬ್ಯಾಂಕ್ ಗಳು ಇಂದು ಸ್ವಂತ ಕಟ್ಟಡ ಹಾಗೆನೇ ಹವಾನಿಯಂತ್ರಿತವಾಗುತ್ತಿವೆ. ರಾಷ್ಟ್ರೀಕೃತ ಬ್ಯಾಂಕ್ ಗಳು ನೀಡದೆ ಇದ್ದ ಸಾಲದ ಸಹಾಯವನ್ನು ಸಹಕಾರಿ ಬ್ಯಾಂಕುಗಳು ಕ್ಲಪ್ತ ಸಮಯದಲ್ಲಿ ನೀಡಿವೆ ಎಂದರು.
ಇದೇ ಸಂದರ್ಭದಲ್ಲಿ ಅರ್ಹ 77 ಮಂದಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ ಕಾಮತ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಹಕಾರ ಮಾರಾಟ ಮಂಡಲದ ಎಂ.ಡಿ.ಲಿಂಗರಾಜು, ನಬಾರ್ಡ್ ಡಿಜಿಎಂ ಕೆ.ಜಗದೀಶ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಯಕರ ಶೆಟ್ಟಿ ಇಂದ್ರಾಳಿ, ಕಣಚೂರು ಮೋನು, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಮೇಘರಾಜ್ ಜೈನ್, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಎಂ.ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಶಶಿಕುಮಾರ್ ರೈ ಬಾಲ್ಗೊಟ್ಟು, ಮೋನಪ್ಪ ಶೆಟ್ಟಿ ಎಕ್ಕಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಮತ್ತಿತರರು ಉಪಸ್ಥಿತರಿದ್ದರು. ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅಥಿತಿಗಳನ್ನು ಸ್ವಾಗತಿಸಿದರು.











