ನವದೆಹಲಿ, ಜೂ. 12 : ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ಮುಂಜಾನೆ ಸುಮಾರು 2:30ರ ವೇಳೆಗೆ ತುಘಲಕಾಬಾದ್ನ ಐದು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
ನೆಲಮಹಡಿಯಲ್ಲಿ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದಾಗಿ ಒಳಭಾಗದಲ್ಲಿ ದಟ್ಟ ಹೊಗೆ ಆವರಿಸಿತು.
ಇದರಿಂದ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬರಲಾಗದೇ ಅಲ್ಲೇ ಸಿಲುಕಿಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ವಾಹನಗಳು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ,ಕಟ್ಟಡದಲ್ಲಿ ಸಿಲುಕಿಕೊಂಡಿದ್ದ 8 ಜನರನ್ನು ರಕ್ಷಿಸಿ ಕೂಡಲೇ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಅಗ್ನಿ ಅವಘಡ ಸಂಭವಿಸಲು ನಿಖರ ಕಾರಣವೇನು ? ಮತ್ತು ಹಾನಿ ಎಷ್ಟು ಪ್ರಮಾಣದಲ್ಲಿ ನಡೆದಿದೆ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.











