ಮಂಗಳೂರು, ಜು.05 : ಸಹಕಾರಿ ಪಿತಾಮಹ ಎಂದೇ ಕರೆಯಲ್ಪಡುವ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಮುಂದಕ್ಕೆ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಬೇಕು. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ತುಂಬಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ. ಇಂದು ಇಲ್ಲಿ ಪುರಸ್ಕಾರ ಪಡೆದಿರುವ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ, ಮಕ್ಕಳು ದೇಶಕಟ್ಟುವ ಕಾಯಕದಲ್ಲಿ ತೊಡಗಲಿ. ಮುಂದೆ ಕನಿಷ್ಠ ಇಬ್ಬರು ಮಕ್ಕಳಿಗಾದರೂ ನೆರವಾಗುವಂತಾಗಬೇಕು ಎಂದರು.
ವೇದಿಕೆಯಲ್ಲಿ ಮಾಜಿ ಸಚಿವ ಜೆ.ಕೃಷ್ಣ ಪಾಲೇಮಾರ್, ಬ್ಯಾಂಕ್ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಕೋಟ್ಯಾನ್, ಬ್ಯಾಂಕ್ ಎಂ.ಡಿ.ಗೋಪಿನಾಥ್ ಭಟ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಂ.ಡಿ.ಪ್ರವೀಣ್ ನಾಯ್ಕ್, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಉಪಸ್ಥಿತರಿದ್ದರು.
ಯೋಗಾಪ್ರತಿಭೆ ತನುಶ್ರೀ ಪಿತ್ರೋಡಿ ಅವರಿಂದ ಯೋಗ ಪ್ರದರ್ಶನ ನಡೆಯಿತು. ಚಿತ್ರಲೇಖ ಶೆಟ್ಟಿ ದೇವರನ್ನು ಸ್ತುತಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು.











