ಕೋಲ್ಕತ್ತಾ,ಜು. 17 : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನ ಬೆಹ್ರಾಂಪುರ ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳಗ್ಗೆ ಸುಮಾರು 7 ಗಂಟೆ ಹೊತ್ತಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವ್ಯಾನ್‌ಗೆ ನಿಮ್ತಿತಾ-ಕಟ್ವಾ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕಟ್ವಾದಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಕರ್ಣ ಸುಬರ್ಣ ನಿಲ್ದಾಣದ ಬಳಿ ಕ್ರಾಸಿಂಗ್ ಗೇಟ್ ದಾಟುತ್ತಿದ್ದಾಗ ರೈಲು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಹಾಗೂ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.











