ಮಂಗಳೂರು, ಜು. 20 : ಬೃಹತ್ ಮರವೊಂದು ಬೇರುಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ನಗರದ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜು ಸಮೀಪದ ಒಳರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಭಾರೀ ಮಳೆಗೆ ಮರವು ಏಕಾಏಕಿ ಉರುಳಿ ಕಾರಿನ ಮೇಲೆ ಬಿದ್ದಿದೆ. ಈ ಮರದ ಬೃಹತ್ ಕೊಂಬೆಗಳು ಪಕ್ಕದಲ್ಲಿದ್ದ ಕ್ಯಾಂಟೀನ್ ಮೇಲೂ ಬಿದ್ದು ಕ್ಯಾಂಟೀನ್ ಕಟ್ಟಡಕ್ಕೂ ಹಾನಿಯಾಗಿದೆ. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದಿದ್ದರಿಂದ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಕಾರ್ಯಾಚರಣೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡರು.











