ಮಂಗಳೂರು, ನ.15 : ದ ಸಾಫ್ರನ್ ಫ್ರಂಟ್ ಕೇಸರಿ ಒಕ್ಕೂಟದ ನೇತೃತ್ವದಲ್ಲಿ ಸಂತ ಸಂಸ್ಮರಣಾ ಕಾರ್ಯಕ್ರಮ ಹಾಗೂ ಗೋಪಾಷ್ಟಮಿ ಪ್ರಯುಕ್ತ ಸಾರ್ವಜನಿಕ ಗೋ ಪೂಜೆ ಕಾರ್ಯಕ್ರಮವು ನವೆಂಬರ್ 17ರಂದು ಸಂಜೆ 4 ಗಂಟೆಗೆ ನಗರದ ಕದ್ರಿ ಮೈದಾನದಲ್ಲಿ ನಡೆಯಲಿದೆ ಎಂದು ದ ಸಾಫ್ರನ್ ಫ್ರಂಟ್ ಕೇಸರಿ ಒಕ್ಕೂಟದ ಕಾನೂನು ಸಲಹೆಗಾರ ದಿನಕರ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿ ಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾಗೃತ ಸಂತ, ಉದ್ಭವ ಭಾರತ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 33 ಮಂದಿ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಕದ್ರಿ ದೇವಸ್ಥಾನದಿಂದ ಕದ್ರಿ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 12 ಗಂಟೆಯಿಂದ ಸಾರ್ವಜನಿಕ ಗೋಪೂಜೆ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಕದ್ರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಬಳಿಕ ಸಂತರ ಮೆರವಣಿಗೆ ಕದ್ರಿ ಮೈದಾನದವರೆಗೆ ಸಾಗಲಿದ್ದು, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಒಡಿಶಾದ ಗೋವರ್ಧನ ಪೀಠದ ಜಗದ್ಗುರು ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಮಂತ್ರಾಲಯದ ಶ್ರೀ ಸುಭುದೇಂದ್ರ ತೀರ್ಥರು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಸೇರಿದಂತೆ ಸುಮಾರು 32 ಸ್ವಾಮೀಜಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಈಗಾಗಲೇ ವಿವಿಧ ಹಿಂದೂಪರ ಸಂಘಟನೆಗಳಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಗೋ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಪವಿತ್ರನ್, ಭಕ್ತಿ ಭೂಷಣ್ ದಾಸ್ ಗುರೂಜಿ, ಡಾ.ಎಲ್.ಕೆ. ಸುವರ್ಣ, ಇ.ಎಸ್ ಮುನಿರತ್ನ, ತುಷಾರ್ ಕದ್ರಿ ಮತ್ತಿತರರು ಉಪಸ್ಥಿತರಿದ್ದರು.









