ಮಂಗಳೂರು, ನ. 18 : ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿಯ ಇದರ ಆಶ್ರಯದಲ್ಲಿ ಗ್ರಾಮ ಪ್ರತಿನಿಧಿ ಸಮ್ಮೇಳನ ಮತ್ತು ಎಜುಕೇಷನಲ್ ಎಕ್ಸೆಲೆನ್ಸ್ ಅವಾರ್ಡ್ ಸಮಾರಂಭವು ನ.22ನೇ ಭಾನುವಾರ ಮಂಗಳೂರು ಪುರಭವನದಲ್ಲಿ ಬೆಳಿಗ್ಗೆ ಗಂಟೆ 9-30 ರಿಂದ ನಡೆಯಲಿದೆ ಎಂದು ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ್ ಸಾಮಾನಿ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ.ಅಜಿತ್ ಕುಮಾರ್ ರೈ ಮಾಲಾಡಿಯವರು ವಹಿಸಿಕೊಳ್ಳಲಿರುವರು. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಗ್ರಾಮ ಪ್ರತಿನಿಧಿಗಳ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಿದ್ದಾರೆ.ವಿವೇಕ್ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ಆಳ್ವಾಸ್ ಎಜುಕೇಷನಲ್ ಟ್ರಸ್ಟ್ ಇವರು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ 95% ಅಂಕಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಜುಕೇಷನಲ್ ಎಕ್ಸೆಲೆನ್ಸ್ ಅವಾರ್ಡ್ ನೀಡಿ ಗೌರವಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ತಾಲೂಕು ಸಮಿತಿಯ ಉಪಸಂಚಾಲಕ ಅಶ್ವತ್ಥಾಮ್ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ್ ಮೋಹನ್ ರೈ,ಕಾರ್ಯಕಾರಿ ಸಮಿತಿಯ ಸದಸ್ಯ ಉಲ್ಲಾಸ್ ಆರ್. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.











