ಮಂಗಳೂರು, ನ.23 : ಹಿರಿಯ ಸಮಾಜಸೇವಕ ದಿವಂಗತ ದಾಮೋದರ ಆರ್. ಸುವರ್ಣ ಅವರ 102ನೇ ಜನ್ಮಜಯಂತಿಯ ಅಂಗವಾಗಿ ನವೆಂಬರ್ 29ರಂದು ಮಂಗಳೂರಿನ ಕುದ್ರೋಳಿಯಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ನವೀನ್ ಚಂದ್ರ ಸುವರ್ಣ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 29ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿ ರುವರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್ ವಿದ್ಯಾರ್ಥಿವೇತನ ವಿತರಣೆಗೆ ಚಾಲನೆ ನೀಡಲಿರುವರು. ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವಿ. ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿರುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಸಮಾಜದ ವಿದ್ಯಾರ್ಥಿಗಳಿಗೆ ಒಟ್ಟು 80 ಲಕ್ಷ ರೂ.ಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಪಾಹಾರ ಮತ್ತು ಮಧ್ಯಾಹ್ನದ ಭೋಜನದ ವ್ಯವಸ್ಥೆ ಇರಲಿದೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಾಜಬಾಂಧವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ವಿನಂತಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉದಯಚಂದ್ರ ಡಿ.ಸುವರ್ಣ ಉಪಸ್ಥಿತರಿದ್ದರು.











