ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2,2022 ರ ಶುಕ್ರವಾರ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ.ಎಂದು ಪ್ರಧಾನಿ ಮೋದಿಯವರು ಹೇಳಿದರು.
ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದಾಗಿ ನಮ್ಮ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿಗೆ ಸಾಧ್ಯವಾಗಲಿದೆ.ಕಳೆದ 8 ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ.
ಜಲಜೀವನ್ ಮಿಷನ್ ಯೋಜನೆಯಡಿ ಕನಾ೯ಟದಲ್ಲಿ 30ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ 30ಲಕ್ಷ ಫಲಾನುಭಿಗಳಿಗೆ ನಾಲ್ಕುಸಾವಿರ ಕೋಟಿ ರೂಪಾಯಿ ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 3800 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ 4 ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ಇಡೀ ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.