ಮಂಗಳೂರು,ಆ.16 :ನಗರದ ನೆ ಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆ.15ರ ಮಂಗಳವಾರ ನಡೆಯಿತು.
ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಸಮಾರ೦ಭದಲ್ಲಿ ಮಾತಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಆ.15 ,ಇಂದು ನಮಗೆಲ್ಲ ಸಂತಸದ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರಿಗೆ ಹಾಗೂ ಹುತಾತ್ಮರಿಗೆ ಗೌರವ ಸಲ್ಲಿಸಲು, ಸ್ವಾತಂತ್ರ್ಯ ಭಾರತದಲ್ಲಿ ನಡೆದು ಬಂದ ದಾರಿಯನ್ನು ಹಾಗೂ ಅದರ ಏಳುಬೀಳುಗಳನ್ನು ಸ್ಮರಿಸುತ್ತಾ, ದೇಶದ ಉಜ್ವಲ ಭವಿಷ್ಯಕ್ಕಾಗಿ ಕನಸುಕಟ್ಟಿಕೊಳ್ಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಈ ಸಂದರ್ಭದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ಘಟನೆಗಳನ್ನು ಮತ್ತು ಮುಖ್ಯ ಆಶಯಗಳನ್ನು ನಾವು ಸ್ಮರಿಸಬೇಕು ಎಂದು ಅವರು ಹೇಳಿದರು.
ಸಮಾರ೦ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷರಾದ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್., ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿದ್ದರು.ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಥಸಂಚನದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.