ಬೆಂಗಳೂರು, ಸೆ.29 : ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್ ಐಯ್ಯರ್ ಅವರು ದೂರು ನೀಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿತ್ತು. ಈ ಆದೇಶದ ಬೆನ್ನಲ್ಲೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದರಲ್ಲಿ ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದು, ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ. ಇನ್ನು ಐಪಿಸಿ ಸೆಕ್ಷನ್ ೩೮೪ (ಸುಲಿಗೆ), 120ಬಿ (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಇವರೆಲ್ಲರ ವಿರುದ್ಧ ಪ್ರಕರಣ ದಾಖಲಾಗಿದೆ.