ನವದೆಹಲಿ, ನ.21:ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಕಾರ್ಯಕ್ರಮ ಇಂದು ಗುರುವಾರ ನಡೆಯಿತು. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದು ಅವರು ತಿಳಿಸಿದರು.
ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.