ಮಂಗಳೂರು, ಡಿ.09 : ಡಿ. 21ರಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವ ಆಯೋಜಿಸಲು ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಡಿ. 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ತಿರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಡಿಸೆಂಬರ್ 28 ಹಾಗೂ 29ರಂದು ಪಣಂಬೂರು/ತಣ್ಣೀರುಬಾವಿ ಬೀಚ್ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜನವರಿ 4 ಮತ್ತು 5 ರಂದು ಕದ್ರಿಪಾರ್ಕ್ ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ “ಯುವ ಉತ್ಸವ” ನಡೆಯಲಿದೆ. ಜನವರಿ 17 ಮತ್ತು 18 ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ-ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಹೆಚ್ಚುವರಿ ಪೊಲೀಸು ವರಿಷ್ಠಾಧಿಕಾರಿ ರಾಜೇಂದ್ರ, ಮೂಡ ಆಯುಕ್ತ ನೂರ್ ಜಹಾನ್ ಮೊದಲಾದವರು ಉಪಸ್ಥಿತರಿದ್ದರು.