ಬೆಂಗಳೂರು, ಡಿ.17: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ನ ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂ.11 ರಂದು ನಟ ದರ್ಶನ್ ಸೇರಿ ಹಲವರನ್ನು ಬಂಧಿಸಲಾಗಿತ್ತು. ಈ ನಡುವೆ ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆ ಅಗತ್ಯತೆಯ ಹಿನ್ನೆಲೆ ನಟ ದರ್ಶನ್ಗೆ ಮಧ್ಯಂತರ ಜಾಮೀನು ಪಡೆದು ಬಿಡುಗಡೆ ಹೊಂದಿದ್ದರು. ಸದ್ಯ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರಿನ್ನೂ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.
ಜಾಮೀನಿಗಾಗಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.